ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ 47 ಸದಸ್ಯರ ಸ್ಟೀರಿಂಗ್ ಸಮಿತಿಯನ್ನು ರಚಿಸಿದ್ದು ಅದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಬದಲಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಘೋಷಿಸಲಾದ ಸಮಿತಿಯಲ್ಲಿ ಕಳೆದ ಸಿಡಬ್ಲ್ಯುಸಿಯ ಬಹುತೇಕ ಸದಸ್ಯರನ್ನು ಉಳಿಸಿಕೊಳ್ಳಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ನೂತನ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಪ್ರಿಯಾಂಕಾ ಗಾಂಧಿ, ಎಕೆ ಆಂಟನಿ, ಅಂಬಿಕಾ ಸೋನಿ, ಆನಂದ್ ಶರ್ಮಾ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಕೂಡ ಹೊಸ ಸಮಿತಿಯ ಭಾಗವಾಗಿದ್ದಾರೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರು ಪಟ್ಟಿಯಿಂದ ನಾಪತ್ತೆಯಾಗಿದ್ದಾರೆ. ವರದಿಗಳ ಪ್ರಕಾರ, ಪಕ್ಷದ ಎಲ್ಲಾ CWC ಸದಸ್ಯರು ಮತ್ತು ಪದಾಧಿಕಾರಿಗಳು ತಮ್ಮ ಸ್ವಂತ ತಂಡವನ್ನು ಆಯ್ಕೆ ಮಾಡಲು ಹೊಸ ಪಕ್ಷದ ಮುಖ್ಯಸ್ಥರಿಗೆ ರಾಜೀನಾಮೆ ನೀಡಿದ್ದರು. “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸಂವಿಧಾನದ XV (ಬಿ) ಪ್ರಕಾರ, ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬದಲಿಗೆ ಕಾರ್ಯನಿರ್ವಹಣೆಯ ಸಮಿತಿಯನ್ನು ರಚಿಸಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.