ಬೆಂಗಳೂರು: ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ಗಳ ನೇಮಕಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ ಷರತ್ತುಬದ್ಧ ಅನುಮತಿ ಸಿಕ್ಕಿದೆ. ನೇಮಕಾತಿ ಸಂಬಂಧ ಕೆಪಿಟಿಸಿಎಲ್ 2023ರ ಫೆಬ್ರವರಿ 4ರಂದು ಪ್ರಕಟಿಸಿದ್ದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶ ಪ್ರಶ್ನಿಸಿ, ಆ ಪಟ್ಟಿಯಲ್ಲಿ ಅರ್ಹತೆ ಪಡೆದುಕೊಂಡಿದ್ದ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲೂಕಿನ ಜಿ.ಶೃತಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ, ನೇಮಕಾತಿ ಪ್ರಕ್ರಿಯೆ ನಡೆಸಲು ಷರತ್ತಿನ ಅನುಮತಿ ನೀಡಿದೆ. ಅಲ್ಲದೆ, ಪರೀಕ್ಷೆಯ ಫಲಿತಾಂಶವು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ನ್ಯಾಯಪೀಠ ತಿಳಿಸಿದೆ. ಈ ತಾತ್ಕಾಲಿಕ ನೇಮಕಾತಿಗಳು ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಡುತ್ತವೆ ಎಂದು ನೇಮಕಾತಿ ಆದೇಶಗಳಲ್ಲಿ ನಮೂದಿಸಬೇಕು. ಒಂದೊಮ್ಮೆ ಮೇಲ್ಮನವಿ ಪುರಸ್ಕೃತಗೊಂಡು ಮೇಲ್ಮನವಿದಾರರು ಆಯ್ಕೆಗೊಂಡರೆ ಸೇವಾ ಹಿರಿತನ ಮತ್ತು ರೋಸ್ಟರ್ ಪಾಲಿಸಬೇಕು ಎಂದು ಹೇಳಿರುವ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿದೆ.