ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರು ಇಂದು ವಿಧಾನಸಭಾ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಪ್ರತಿಪಕ್ಷದ ಸದಸ್ಯರುಗಳು ರಾಜ್ಯಸಭಾ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿ ಡಾ.ಸೈಯದ್ ನಾಸೀರ್ ಹುಸೇನ್ ಬೆಂಗಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಪ್ರಸ್ತಾಪಿಸಿದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ಈಗಾಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಈಗಾಗಲೇ ಈ ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಚುರುಕುಗೊಳಿಸಿದೆ. ದೇಶದ ಹಿತದೃಷ್ಟಿಯಿಂದ ಹಾಗೂ ಸಮಾಜದ ಹಿತದೃಷ್ಟಿಯಿಂದ ಅಪರಾಧಿಗಳನ್ನು ಆದಷ್ಟು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ರಕ್ಷಿಸುವ ಮಾತೇ ಇಲ್ಲ ಎಂದರು.
ರಾಜ್ಯದಲ್ಲಿ ಪಾಕಿಸ್ತಾನದ ಪರ ಧ್ವನಿ ಎತ್ತಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಯನ್ನು ಯಾರೇ ಕೂಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.