ಬೆಂಗಳೂರು : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗುತ್ತಿದೆ. ಇದನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓಗಳೊಂದಿಗೆ ನಡೆದ ಸಭೆ ವೇಳೆ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ, ಭೂಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು. ಪೋಡಿ ಮತ್ತು ದುರುಸ್ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ.
ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್ನಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುವುದು. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.