ಬೆಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.
ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.
ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತದೆ.
ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಪ್ರೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ.
ಭಾರತ ಚುನಾವಣಾ ಆಯೋಗವು ಸಿ-ವಿಜಿಲ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದು. ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಾಗ್ರಿಗಳು, ಮದ್ಯ ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಪ್ಲಿಕೇಷನ್‍ನಲ್ಲಿ ವಿಡಿಯೋ ಮತ್ತು ಪೋಟೋಗಳ ಮೂಲಕ ಮಾಹಿತಿ ನೀಡಬಹುದಾಗಿದೆ.
85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಕೋವಿಡ್ ಶಂಕಿತ, ದೃಢಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಇಲಾಖೆಗಳ ನಿರತ ಅಧಿಕಾರಿ ಸಿಬ್ಬಂದಿಗಳಿಗೆ ವಿಶೇಷ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
‘ಯಾವುದೇ ಚುನಾವಣಾ ಕರಪತ್ರಗಳು, ಪೋಸ್ಟರ್, ಬಿಲ್‍ಗಳಲ್ಲಿ ಪ್ರಕಾಶಕರು ಮತ್ತು ಪ್ರಕಾಶನ ಸಂಸ್ಥೆಯ ಮಾಹಿತಿಯನ್ನು ಕಡ್ಡಾಯವಾಗಿ ಮುದ್ರಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಅಭ್ಯರ್ಥಿಯ ಪರವಾಗಿ ಯಾವುದೇ ರೀತಿಯ ರಾಜಕೀಯ ಜಾಹೀರಾತನ್ನು ಪ್ರಕಟಿಸುವ/ಪ್ರಸಾರ ಮಾಡುವ ಮೊದಲು ಜಾಹೀರಾತಿನ ವಿವರವನ್ನು ಚುನಾವಣಾ ಎಂಸಿಎಂಸಿ ತಂಡದ ಗಮನಕ್ಕೆ ತಂದು ಪ್ರಮಾಣ ಪತ್ರ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.’
2024 ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪ್ರತಿಯೊಬ್ಬ ಮತದಾರರು ಸಹ ಅವರ ಹಕ್ಕನ್ನು ಚಲಾಯಿಸಲು ಅಡೆತಡೆಗಳಾಗದಂತೆ ಎಲ್ಲರೂ ಸಹ ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾಡಳಿತದಿಂದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದ ಎಲ್ಲಾ ನಿಯಮಗಳಂತೆ ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ನಡೆಸಲು ಎಲ್ಲಾ ಮತದಾರರು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಕಾರ ಕೋರಿದೆ.
ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ www.eci.nic.in ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ www.ceokarnataka.kar.nic.in ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್ www.kodagu.nic.in ನಲ್ಲಿ ಮಾಹಿತಿ ಪಡೆಯಬಹುದು.