ಮಂಡ್ಯ : ಜುಲೈ 28 ರಂದು ಮದ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಹೀಗಾಗಿ ತಾಲೂಕಿನ ಜನತೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.
ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಮಾವೇಶದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ 1300 ಕೋಟಿ ರೂ ಗಳಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ. ಅದಕ್ಕಾಗಿ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಇದು ನಮ್ಮ ತಾಲೂಕಿನ ಹೆಮ್ಮೆ ಎಂದರು.
ಅಷ್ಟೇ ಅಲ್ಲದೇ ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ, ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಸೇರಿದಂತೆ ಹಲವಾರು ಇನ್ನಿತರೆ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಇಂತಹ ಅಭೂತಪೂರ್ವ ಕಾರ್ಯಕ್ರಮವು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವುದು ನಮ್ಮ ಹೆಮ್ಮಯೆಂದು ಮನಗಂಡು ತಾಲೂಕಿನ ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾವೇಶಕ್ಕೆ ಆಗಮಿಸುವ ಮೂಲಕ ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಮಾವೇಶವು ಅಚ್ಚುಕಟ್ಟಾಗಿ ನಡೆಯಲು ಹೆಚ್ಚು ಸಂಘಟಿತರಾಗಿ ಶ್ರಮವಹಿಸಬೇಕು ಎಂದ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹತ್ತಾರು ಸಚಿವರುಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಮಾತನಾಡಿ, ಮೈಸೂರು ಸಂಸ್ಥಾನದಲ್ಲಿ 1952ರಲ್ಲಿ ಚುನಾವಣಾ ರಾಜಕಾರಣ ಪ್ರಾರಂಭವಾದಾಗಿನಿಂದ ಮದ್ದೂರು ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು, ಸಚಿವರು ಒಟ್ಟಾಗಿ ಭೇಟಿ ನೀಡಿ ಇಷ್ಟೊಂದು ದೊಡ್ಡ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲ ಬಾರಿಗೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಹಾಲಿ ಶಾಸಕರಾದ ಕೆ.ಎಂ.ಉದಯ್ ಅವರು ಕೇವಲ 2 ವರ್ಷಗಳ ಅವಧಿಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಕಾವೇರಿ ನೀರಾವರಿ ನಿಗಮ, ಚಾಮುಂಡೇಶ್ವರಿ ವಿದ್ಯುತ್ ನಿಗಮ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅನುದಾನ ತರುವಲ್ಲಿ ಉದಯ್ ಅವರ ಪರಿಶ್ರಮ ಅಪಾರ ಎಂದರು.
ಇದು ಕೇವಲ ಸಾಧನಾ ಸಮಾವೇಶ ಮಾತ್ರವಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಾದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಯೂ ಆಗಿದೆ ಎಂದರು.
ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದು, ಶಾಸಕ ಉದಯ್ ಅವರಿಗೆ ಶಕ್ತಿ ತುಂಬಬೇಕು ಎಂದು ದಿನೇಶ್ ಗೂಳಿಗೌಡ ಕರೆ ನೀಡಿದರು.
ರಾಜ್ಯದಲ್ಲಿ 100 ಬ್ಲಾಕ್ ಕಾಂಗ್ರೆಸ್ ಕಚೇರಿಗಳು ಸ್ವಂತ ಕಟ್ಟಡದಲ್ಲಿರಬೇಕೆಂಬ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಂಕಲ್ಪದ ಭಾಗವಾಗಿ, ಶಾಸಕ ಉದಯ್ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಾಸಕ ದಿನೇಶ್ ಗೂಳಿಗೌಡ ಅಭಿನಂದಿಸಿದರು.
ರಾಜ್ಯದಲ್ಲಿ ಕೇವಲ 8 ಶಾಸಕರು ಮಾತ್ರ ತಮ್ಮ ಸ್ವಂತ ನಿವೇಶನವನ್ನು ಕಾಂಗ್ರೆಸ್ ಟ್ರಸ್ಟ್ ಗೆ ಬರೆದುಕೊಟ್ಟಿದ್ದು, ಅವರಲ್ಲಿ ಉದಯ್ ಕೂಡ ಒಬ್ಬರು. 6000 ಚದರ ಅಡಿ ವಿಸ್ತೀರ್ಣದ, ಕೋಟಿಗಟ್ಟಲೆ ಬೆಲೆಬಾಳುವ ಆಸ್ತಿಯನ್ನು ಕೆಪಿಸಿಸಿಗೆ ಕೊಡುಗೆಯಾಗಿ ನೀಡಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ನಿವೇಶನವನ್ನು ಕಾಂಗ್ರೆಸ್ ಪಕ್ಷದ ಹೆಸರಿಗೆ ನೋಂದಾಯಿಸಿಕೊಂಡಿದ್ದಾರೆ ಎಂದು ದಿನೇಶ್ ಗೂಳಿಗೌಡ ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸುಮಾರು 140 ವರ್ಷಗಳ ಇತಿಹಾಸವಿದ್ದು, ರಾಜ್ಯದಲ್ಲಿ 480 ಬ್ಲಾಕ್ ಕಾಂಗ್ರೆಸ್ ಕಚೇರಿಗಳ ಪೈಕಿ ಬಹುತೇಕ ಬಾಡಿಗೆ ಕಟ್ಟಡದಲ್ಲಿವೆ. ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ 100 ಬ್ಲಾಕ್ ಕಾಂಗ್ರೆಸ್ ಕಚೇರಿಗಳನ್ನು ಸ್ವಂತ ಕಟ್ಟಡದಲ್ಲಿ ನಿರ್ಮಿಸುವಂತೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಉದಯ್ ಕೊಡುಗೆ ಅತ್ಯಂತ ಮಹತ್ವದ್ದು ಎಂದು ದಿನೇಶ್ ಗೂಳಿಗೌಡ ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ತಾಲೂಕು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಮತಾ, ಯುವ ಘಟಕದ ಅಧ್ಯಕ್ಷ ಕೀರ್ತಿ ಗೌಡ, ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ತಿಮ್ಮದಾಸ್ ಗ್ರೂಪ್ಸ್ ಮಾಲೀಕ ಸಿ.ಟಿ.ಶಂಕರ್, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಬಸವರಾಜು, ಎಂ.ಡಿ.ರಾಮಲಿಂಗಯ್ಯ, ಇಂತಿಯಾಜ್ ಉಲ್ಲಾ ಖಾನ್, ಅಜ್ಜಹಳ್ಳಿ ರಾಮಕೃಷ್ಣ ಸೇರಿದಂತೆ ಹಲವರು ಹಾಜರಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ