ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ಪೋಷಕ ನಟ ಸಂತೋಷ್ ಕೆ. ನಾಯರ್ (65) ಅವರು ಮಂಗಳವಾರ ಮುಂಜಾನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಏನಾತು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಮಂಗಳವಾರ ಮುಂಜಾನೆ ಸುಮಾರು 6:30ರ ಸುಮಾರಿಗೆ ಎಂ.ಸಿ. ರಸ್ತೆಯಲ್ಲಿ ಸಂತೋಷ್ ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಟನನ್ನು ಕೂಡಲೇ ಅಡೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆಯ ವೇಳೆ ಅವರಿಗೆ ಹೃದಯಾಘಾತವೂ ಸಂಭವಿಸಿತ್ತು ಎಂದು ವರದಿಯಾಗಿದೆ.
ಈ ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಸಂತೋಷ್ ಅವರ ಪತ್ನಿ ಸುಭಾಶ್ರೀ ಅವರು ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.








