ಮಂಡ್ಯ :- ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಕುರುಹಾದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 2 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.
ಮದ್ದೂರು ಪಟ್ಟಣದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಹಾಗೂ ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ ಅವರು ಶಿವಪುರ ಧ್ವಜ ಸತ್ಯಾಗ್ರಹ ಸೌಧ ಮಾಜಿ ಮುಖ್ಯಮಂತ್ರಿ ದಿ.ಎಸ್.ಎಂ.ಕೃಷ್ಣ ಅವರ ಅಧಿಕಾರ ಅವಧಿಯಲ್ಲಿ ಸೌಧದ ಅಭಿವೃದ್ಧಿಗೆ ಅನುದಾನ ನೀಡಿರುವುದನ್ನು ಹೊರತುಪಡಿಸಿದರೇ ಬೇರೆ ಯಾವುದೇ ಜನಪ್ರತಿನಿಧಿಗಳು ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯ ಮರೀಚಿಕೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಎದುರು ಬೇಸರ ವ್ಯಕ್ತಪಡಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಕೆ.ಎಂ.ಉದಯ್ ಈ ಹಿಂದೆಯೇ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆ. ಹೀಗಾಗಿ ಸೌಧದ ಅಭಿವೃದ್ಧಿಗೆ ಈಗಾಗಲೇ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.
ಮುಂದಿನ ಸ್ವಾತಂತ್ರೋತ್ಸವದ ವೇಳೆಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಸೌಧವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಉದಯ್ ಆಶ್ವಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಉಪ ತಹಶೀಲ್ದಾರ್ ಸೋಮಶೇಖರ್, ಚನ್ನೇಗೌಡ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಸ್ವರೂಪ್ ಚಂದ್, ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜ್, ಕಸಾಪ ಅಧ್ಯಕ್ಷ ಕೆ.ಎಸ್.ಸುನೀಲ್ ಕುಮಾರ್ ಪುರಸಭಾ ಸದಸ್ಯರು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ