ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಮಂತ್ರಿಯನ್ನಾಗಿ ಮಾಡಲು ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಈ ಬಾರಿ ಸಂಸದರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ತಾಲೂಕಿನಾದ್ಯಂತ ಅನ್ಯ ಪಕ್ಷದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಜೆಡಿಎಸ್ಗೆ ಸೇರ್ಪಡೆಗೊಳ್ಳುತ್ತಿದ್ದಾರೆಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.
ಮದ್ದೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೆಸ್ತೂರು ಭಾಗದ ತಾಪಂ ಮಾಜಿ ಸದಸ್ಯ ಕೆ.ಟಿ.ರಾಜಣ್ಣ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಿಳಿಯಪ್ಪ ಸೇರಿದಂತೆ ಹಲವಾರು ಮುಖಂಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.
ಈ ಇಬ್ಬರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿರುವುದರಿಂದ ಆತಗೂರು ಹೋಬಳಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಆನೆ ಬಲ ಬಂದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನ್ಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಬರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು 2 ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಿ ಅನುಕೂಲ ಕಲ್ಪಿಸುವ ಜತೆಗೆ ಎಲ್ಲಾ ವರ್ಗದವರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಜನಮಾನಸದಲ್ಲಿ ಉಳಿದಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರ ದಕ್ಷ ಹಾಗೂ ಪ್ರಾಮಾಣಿಕವಾಗಿ ಆಡಳಿತ ನಡೆಸುವ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಇವರ ಕೈ ಬಲಪಡಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಮಾತನಾಡಿ, ಏ.11 ರಿಂದ ತಾಲೂಕು ಮತ್ತು ಜೆಲ್ಲೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರ ಪರವಾಗಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಜಂಟಿಯಾಗಿ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಾಗುವುದು. ಈಗಾಗಲೇ ಕೆಲವು ತಾಲೂಕುಗಳಲ್ಲಿ ಅಲ್ಲಿಯಾ ನಾಯಕರು ಮತ್ತು ಮುಖಂಡರು ಮನೆ ಮನೆ ತೆರಳಿ ಮತ ಪ್ರಚಾರ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಏ.12 ರಿಂದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಏ.18 ರ ನಂತರ ಮೈತ್ರಿ ಪಕ್ಷದ ರಾಜ್ಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ, ಅಶ್ವಥ್ ನಾರಾಯಣ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಜಂಟಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದರು.
ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾದರೆ ಮೋದಿ ಅವರ ಸಚಿವ ಸಂಪುಟದಲ್ಲಿ ಕೇಂದ್ರ ಸಚಿವರಾಗಲಿದ್ದಾರೆ. ಇದರಿಂದ ರಾಜ್ಯಕ್ಕೆ ಮತ್ತು ಜಿಲ್ಲೆಯ ಅಭಿವೃದ್ದಿ ಕಾರ್ಯಗಳಿಗೆ ಸಹಕಾರಿಯಾಗಲಿದೆ ಆದ್ದರಿಂದ ಜಿಲ್ಲೆಯ ಮತದಾರರು ಕುಮಾರಸ್ವಾಮಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯನಹಳ್ಳಿ ರಾಜಣ್ಣ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ಜಿಪಂ ಮಾಜಿ ಸದಸ್ಯ ರವಿ, ಮುಖಂಡರಾದ ಕುದರಗುಂಡಿ ಕೃಷ್ಣ, ನಾರಾಯಣಸ್ವಾಮಿ, ಶ್ರೀನಿವಾಸ್ ಸೇರಿದಂತೆ ಇತರರು ಹಾಜರಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಶಿವಮೊಗ್ಗ: ಸಾಗರದಲ್ಲಿ ಖಾಸಗಿ ಬಸ್ ಬ್ರೇಕ್ ಫೇಲಾಗಿ ಸರಣಿ ಅಪಘಾತ, 10ಕ್ಕೂ ಹೆಚ್ಚು ಬೈಕ್ ನಜ್ಜುಗುಜ್ಜು