ಮಂಡ್ಯ: ಪತ್ರಕರ್ತರು ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗಾಗಿ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiah ) ಹೇಳಿದರು.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಕ್ಷೇಮ ನಿಧಿಗೆ ವಂತಿಗೆ ನೀಡಿರುವ ಜನ ಪ್ರತಿನಿಧಿಗಳು ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದು ಸಂಘಟನೆ ಮತ್ತು ಆರ್ಥಿಕ ಉಳಿತಾಯ ಎರಡೂ ಅತೀ ಅಗತ್ಯ. ಈ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದಲ್ಲಿ ಸ್ವ ಸಹಾಯ ಗುಂಪುಗಳಿಗೆ ಹಾಗೂ ಆಟೋ ಚಾಲಕರಿಗೆ ಪ್ರತಿ ವರ್ಷ ದೇಣಿಗೆ ನೀಡಲಾಗುತ್ತಿದೆ.ಇದೇ ಮಾದರಿಯಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಪತ್ರಿಕಾ ವಿತರಕರು ಉಳಿತಾಯ ಆರಂಭಿಸಿದರೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಆರೋಗ್ಯ ಪೂರ್ಣ ಸಮಾಜ ನಿರ್ಮಾದಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಪ್ರಮುಖವಾದುದು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಸಮಾಜವನ್ನು ಸದಾ ಜಾಗೃತವಾಗಿಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರೇಷ್ಮೆ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.