ಮಂಡ್ಯ : ಮಳೆಯಿಂದ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಆಡಳಿತಕ್ಕೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.
ಮದ್ದೂರು ತಾಲೂಕಿನ ವಳಗೆರೆಹಳ್ಳಿ, ಸೊಳ್ಳೆಪುರ, ಸಿಎ ಕೆರೆ ಹೋಬಳಿಯ ಮುಟ್ಟನಹಳ್ಳಿ, ಬೋರಾಪುರ ಹಾಗೂ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮದ್ದೂರು ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15 ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲದೆ ರೈತರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಕಬ್ಬು ಹಾಗೂ ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಕಂದಾಯ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ಒದಗಿಸಿ ಕೊಡಲಾಗುವುದು ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆತ್ಮ ವಿಶ್ವಾಸ ತುಂಬಿದರು.
ವಳಗೆರೆಹಳ್ಳಿ ಸಮೀಪ ಇರುವ ಹೆಬ್ಬಳ್ಳದಲ್ಲಿ ಭಾರಿ ಮಳೆ ಬಂದಾಗ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶವಾಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹೆಬ್ಬಳ್ಳದ ನೀರು ರೈತರ ಜಮೀನುಗಳಿಗೆ ನುಗ್ಗಿ ಹಾನಿಯಾಗದಂತೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಗ್ರಾ.ಪಂ ಸದಸ್ಯ ಸುನೀಲ್, ಕಾಂಗ್ರೆಸ್ ಮುಖಂಡರಾದ ಪುಟ್ಟರಾಜು, ಆದೀಶ್, ಅಲೋಕ್, ತಾ.ಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್, ಲೋಕೋಪಯೋಗಿ ಇಲಾಖೆಯ ಎಇಇ ದೇವಾನಂದ್, ಜೆಇ ಹನುಮಂತ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಸಾಗರದ ‘ಹಾಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ ಸಮಿತಿ’ಗೆ ಕಾನೂನು ಸಂಕಷ್ಟ?
BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ