ದೇವಾಸ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಮನಕಲಕುವ ಘಟನೆ ನಡೆದಿದೆ.
Get the latest creative news from FooBar about art, design and business.
ದೇವಾಸ್ ಜಿಲ್ಲೆಯ ಟೋಂಕ್ ಖುರ್ದ್ ತಹಸಿಲ್‌ನ ಟೋಂಕಲಾ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿನ ನಿರ್ಮಾಣ ಹಂತದ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಎಂದಿನಂತೆ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ನಲುಗಿದ್ದು, ಕಾರ್ಖಾನೆಯಲ್ಲಿದ್ದವರು ಅವಶೇಷಗಳಡಿ ಸಿಲುಕಿಕೊಂಡರು.
ಘಟನೆ ಸಂಭವಿಸಿದ ತಕ್ಷಣ ದೇವಾಸ್ ಮತ್ತು ಉಜ್ಜಯಿನಿಯಿಂದ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು. ಜಿಲ್ಲಾಧಿಕಾರಿ ರಿತುರಾಜ್ ಸಿಂಗ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದರು. ಗಾಯಾಳುಗಳನ್ನು ತಕ್ಷಣವೇ ದೇವಾಸ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅವರು, ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಪಟಾಕಿ ಕಾರ್ಖಾನೆಯಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

