ಬೆಂಗಳೂರು : ಓಟಿನ ರಾಜಕಾರಣಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿರುವುದು ವಿಷಾದಕರ. ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ ಸೇರಿದ್ದು ಅಂತ ಕಾಂಗ್ರೆಸ್‌ನವರು ಹೇಳುತ್ತಾರೆ.ಅಲ್ಲದೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟದಿಂದ ಹೊರಗೆ ಇಡಬೇಕು ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಅವರು ಆಕ್ರೋಶ ಹೊರ ಹಾಕಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿರೋಧ ಪಕ್ಷದ ನಾಯಕರು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಅಸಮಾಧಾನ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟದಿಂದ ಹೊರಗೆ ಇಡಬೇಕು ಎಂದು ಒತ್ತಾಯಿಸಿದ್ದಾರೆ.
ಹೆಬ್ಬಾಳ್ಕರ್ ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು. ಹಾಗಾಗಿಯೇ ಬೆಳಗಾವಿ ಅಧಿವೇಶನ ಮಾಡಲಾಗುತ್ತಿದೆ. ಅವರ ಹೇಳಿಕೆ ಬೇರೆಯವರನ್ನು ಕೆರಳಿಸಲಿದೆ ಎಂದು ಬೆಂಗಳೂರಿನಲ್ಲಿ ಶಾಸಕ ಎಸ್.ಆರ್. ವಿಶ್ವನಾಥ್ ಆಕ್ರೋಶ ಹೊರ ಹಾಕಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜ.07ರ ಭಾನುವಾರ ನಡೆದ 6ನೇ ಕನ್ನಡ ಸಮಾವೇಶ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ.
ಕನ್ನಡ ಭಾಷೆ ಹಲವು ವರ್ಷಗಳ ಇತಿಹಾಸ ಹೊಂದಿದೆ. ನಮ್ಮ ಸಾಹಿತಿಗಳು ಇದನ್ನು ಸಾಬೀತು ಮಾಡಿದ್ದಾರೆ. ನಮ್ಮ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತ್ರಿಗಳು ಲಭಿಸಿರೋದು ನಮ್ಮ ಹೆಮ್ಮೆ. ನಮ್ಮ ಕನ್ನಡ ಭಾಷೆ ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ. ಇಂತಹ ನಾಡಿನಲ್ಲಿ ಜನಿಸಲು ನಾವು ಪುಣ್ಯ ಮಾಡಿರಬೇಕು.
ಆದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಭಾಷಣದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.