ಶಿವಮೊಗ್ಗ: “ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಶುಚಿರುಚಿಯಾದ ಆಹಾರವನ್ನು ನೀಡಬೇಕು. ಹಾಸ್ಟೆಲ್ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ, ಮಕ್ಕಳು ಸಹ ಶುಚಿತ್ವ ಕಾಪಾಡಿಕೊಳ್ಳುವಂತೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇಲ್ಲಿನ ಜೋಗ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ಆಹಾರದಲ್ಲಿ ಮೋಸ ಮಾಡಿದರೆ ಕಠಿಣ ಕ್ರಮ:
“ರಾಜ್ಯ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿ ನಿಲಯಗಳ ಮೂಲಕ ಮಕ್ಕಳಿಗೆ ವಸತಿ ಹಾಗೂ ಶಿಕ್ಷಣದ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸುತ್ತಿದೆ. ಸರ್ಕಾರದ ಈ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪಬೇಕು” ಎಂದು ಬೇಳೂರು ಹೇಳಿದರು. ಕೆಲವು ವಿದ್ಯಾರ್ಥಿ ನಿಲಯಗಳಲ್ಲಿ ವ್ಯವಸ್ಥೆ ಸರಿಯಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುವುದು. ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿದ್ದು, ಮಕ್ಕಳಿಗೆ ಉತ್ತಮವಾದ ಊಟ-ತಿಂಡಿ ನೀಡಬೇಕು. ಅವರ ಆಹಾರದ ವಿಷಯದಲ್ಲಿ ಯಾವುದೇ ಕಾರಣಕ್ಕೂ ಮೋಸ ಮಾಡಬಾರದು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
ನಕಲಿ ದಾಖಲಾತಿ ಪ್ರದರ್ಶನಕ್ಕೆ ತಡೆ:
“ಕೆಲವು ಹಾಸ್ಟೆಲ್‌ಗಳಲ್ಲಿ ವಾಸ್ತವವಾಗಿ ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ, ದಾಖಲೆಗಳಲ್ಲಿ ಹೆಚ್ಚಿನ ಸಂಖ್ಯೆಯನ್ನು ತೋರಿಸಿ ವಂಚಿಸಲಾಗುತ್ತಿದೆ. ಅಲ್ಲದೆ ಮಕ್ಕಳಿಗೆ ಹೊಟ್ಟೆ ತುಂಬ ಊಟ ನೀಡುತ್ತಿಲ್ಲ ಎನ್ನುವ ದೂರುಗಳೂ ಇವೆ. ಇಂತಹ ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸದ್ಯದಲ್ಲೇ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಹಾಸ್ಟೆಲ್ ಪ್ರವೇಶಾತಿ ಪ್ರಕ್ರಿಯೆಗಳು ಶುರುವಾಗಲಿವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ದಿಢೀರ್ ಭೇಟಿಯ ಸಂದರ್ಭದಲ್ಲಿ ಸಾಗರ ನಗರಸಭೆಯ ಮಾಜಿ ಸದಸ್ಯೆ ಮಧುಮಾಲತಿ, ಶಾಸಕರ ಕರ್ತವ್ಯಾಧಿಕಾರಿ ಟಿ.ಪಿ.ರಮೇಶ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.








