ಬೆಂಗಳೂರು: ಒಂದು ತಿಂಗಳ ಕಾಲ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಸಂಚರಿಸಲು ಆರಂಭಿಸಿರುವ ಸಂವಿಧಾನ ಜಾಗೃತಿ ಜಾಥ ಹಾಗೂ ಸ್ಥಬ್ಧಚಿತ್ರ ಮೆರವಣಿಗೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರೋತ್ಸಾಹ ಸಿಗುತ್ತಿದ್ದು, ಸಂಭ್ರಮ, ಉತ್ಸಾಹಗಳನ್ನು ತೋರುತ್ತಿದ್ದಾರೆ ಎಂದು ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ಬಹಣಾಧಿಕಾರಿಗಳು ಅಭಿಪ್ರಾಯ ಪಟ್ಟರು.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಂಟಿಯಾಗಿ ಸೋಮವಾರದಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಮಾವೇಶ ನಡೆಸಿ ಹಳ್ಳಿಗಳಲ್ಲಿ ಸಂಚಾರ ಮಾಡುತ್ತಿರುವ ಸಂವಿಧಾನ ಜಾಗೃತಿ ಜಾಥ ಬಗ್ಗೆ ಜನರಲ್ಲಿ ಇನ್ನೂ ಹೆಚ್ಚು ಅರಿವು ಮೂಡಿಸಲು ಮತ್ತಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ನಿರ್ದೇಶನ ನೀಡಿದರು.
ಈ ತಿಂಗಳ 24 ಹಾಗೂ 25ರಂದು ಬೆಂಗಳೂರು ಅರಮನೆ ಆವರಣದಲ್ಲಿ ಸಂವಿಧಾನ ಕುರಿತ ರಾಷ್ಟ್ರೀಯ ಸಮಾವೇಶ ಹಾಗೂ ಸಂವಿಧಾನ ಜಾಗೃತಿ ಕಾರ್ಯಕ್ರಮ ಕುರಿತಂತೆ ಸಚಿವದ್ವಯರು ಅಧಿಕಾರಿಗಳಿಗೆ ಸಲಹೆ ಸೂಚನೆ ನಿಡಿದರು.
ಸಭೆಯಲ್ಲಿ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.