ನವದೆಹಲಿ:ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್-ಯುಜಿ 2026’ (NEET-UG) ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ‘X’ ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
22 ಲಕ್ಷ ವಿದ್ಯಾರ್ಥಿಗಳಿಗೆ ದ್ರೋಹ: ರಾಹುಲ್ ಗಾಂಧಿ ಆಕ್ರೋಶ
”ನೀಟ್ ಪರೀಕ್ಷೆಗಾಗಿ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು ಓದಿದ್ದರು. ಆದರೆ ಈ ಭ್ರಷ್ಟ ವ್ಯವಸ್ಥೆಯಿಂದಾಗಿ ಅವರ ಕಠಿಣ ಪರಿಶ್ರಮ ಮತ್ತು ಕನಸುಗಳು ಮಣ್ಣುಪಾಲಾಗಿವೆ. ಪರೀಕ್ಷೆ ನಡೆಯುವ ಎರಡು ದಿನಗಳ ಮುಂಚೆಯೇ ನೀಟ್ ಪ್ರಶ್ನೆಪತ್ರಿಕೆಯನ್ನು ವಾಟ್ಸಾಪ್‌ನಲ್ಲಿ ಹಂಚಿ, ಬಹಿರಂಗವಾಗಿ ಮಾರಾಟ ಮಾಡಲಾಗಿದೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ” ಎಂದು ರಾಹುಲ್ ಗಾಂಧಿ ವಿಡಿಯೋದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಧರ್ಮೇಂದ್ರ ಪ್ರಧಾನ್‌ರನ್ನು ತಕ್ಷಣ ವಜಾಗೊಳಿಸಿ
ಶಿಕ್ಷಣ ಸಚಿವರ ಬೇಜವಾಬ್ದಾರಿತನವನ್ನು ತರಾಟೆಗೆ ತೆಗೆದುಕೊಂಡ ರಾಹುಲ್, “ಭಾರತದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ‘ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳುತ್ತಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಯು ನೀಡಿದ್ದ ಪ್ರಮುಖ ಶಿಫಾರಸುಗಳನ್ನು ಅವರು ಕಸದ ಬುಟ್ಟಿಗೆ ಎಸೆದಿದ್ದಾರೆ. ಪ್ರಧಾನಿ ಮೋದಿ ಅವರೇ, ಒಂದೋ ನೀವೇ ಈ ವೈಫಲ್ಯದ ಜವಾಬ್ದಾರಿ ಹೊರಬೇಕು, ಇಲ್ಲದಿದ್ದರೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.
ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಿದ ಆರ್‌ಎಸ್‌ಎಸ್-ಬಿಜೆಪಿ ಜಾಲ
ಕೇಂದ್ರ ಸರ್ಕಾರದ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ, “ದೇಶದ ಶಿಕ್ಷಣ ವ್ಯವಸ್ಥೆಯ ಕೇಂದ್ರಬಿಂದುವನ್ನೇ ನೀವು ಧ್ವಂಸಗೊಳಿಸಿದ್ದೀರಿ. ವಿಶ್ವವಿದ್ಯಾಲಯಗಳಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ತಮಗೆ ಬೇಕಾದವರನ್ನು ಕುಲಪತಿಗಳು ಹಾಗೂ ಪ್ರೊಫೆಸರ್‌ಗಳನ್ನಾಗಿ ನೇಮಕ ಮಾಡಿಕೊಳ್ಳುತ್ತಿವೆ. ಇವರದ್ದೇ ಒಂದು ದೊಡ್ಡ ಜಾಲ (ನೆಕ್ಸಸ್) ಸೃಷ್ಟಿಯಾಗಿದ್ದು, ಕೇವಲ ಹಣ ಮಾಡುವುದೇ ಇವರ ಮುಖ್ಯ ಉದ್ದೇಶವಾಗಿದೆ. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 80ಕ್ಕೂ ಹೆಚ್ಚು ಬಾರಿ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದು, 2 ಕೋಟಿಗೂ ಹೆಚ್ಚು ಯುವಕರ ಭವಿಷ್ಯ ಹಾಳಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.








