ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಯು (JDU) ವರಿಷ್ಠ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭೆಯ ಸದಸ್ಯರಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಅವರು ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಪ್ರಮುಖ ಹೆಜ್ಜೆಯನ್ನಿಟ್ಟಿದ್ದಾರೆ.
ಇಂದು ಮಧ್ಯಾಹ್ನ ಸಂಸತ್ತಿನ ಮೇಲ್ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಬೆನ್ನಲ್ಲೇ ನಿತೀಶ್ ಕುಮಾರ್ ಅವರಿಗೆ ದೆಹಲಿಯ ಅತ್ಯಂತ ಪ್ರತಿಷ್ಠಿತ ವಲಯದಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.ಕೇಂದ್ರ ಸಚಿವರು ಮತ್ತು ದೀರ್ಘಕಾಲದ ಅನುಭವವಿರುವ ಹಿರಿಯ ಸಂಸದರಿಗೆ ಮಾತ್ರ ನೀಡಲಾಗುವ ಅತ್ಯುನ್ನತ ಶ್ರೇಣಿಯ ‘ಟೈಪ್-8’ ಬಂಗಲೆಯನ್ನು ನಿತೀಶ್ ಅವರಿಗೆ ಹಂಚಿಕೆ ಮಾಡುವ ಸಾಧ್ಯತೆಯಿದೆ.
ನಿತೀಶ್ ಕುಮಾರ್ ಅವರು ಈ ಹಿಂದೆ ಕೇಂದ್ರ ರೈಲ್ವೆ ಸಚಿವರಾಗಿ ಮತ್ತು ದೀರ್ಘಕಾಲ ಸಿಎಂ ಆಗಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಈ ವಿಶೇಷ ಶ್ರೇಣಿಯ ವಸತಿ ಸೌಲಭ್ಯ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನಿತೀಶ್ ಕುಮಾರ್ ಅವರ ಈ ಹೊಸ ಜವಾಬ್ದಾರಿಯು ಕೇಂದ್ರ ರಾಜಕಾರಣದಲ್ಲಿ ಜೆಡಿಯು ಪಕ್ಷದ ಪ್ರಭಾವವನ್ನು ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಅವರು ಕೇಂದ್ರ ಸಂಪುಟದಲ್ಲಿ ಪ್ರಮುಖ ಸ್ಥಾನ ಪಡೆಯಲಿದ್ದಾರೆಯೇ ಎಂಬ ಕುತೂಹಲವೂ ರಾಜಕೀಯ ವಲಯದಲ್ಲಿ ಮೂಡಿದೆ.








