ಬೆಂಗಳೂರು: ಮತದಾರರ ಪಟ್ಟಿ ಮ್ಯಾಪಿಂಗ್ ಮಾಡುವ ಕೆಲಸಕ್ಕೆ ಪ್ರೌಢಶಾಲಾ ಶಿಕ್ಷಕರ ಬದಲಿಗೆ ಅಧಿಕಾರಿಗಳನ್ನೇ ನಿಯೋಜಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಮಾನ್ಯತೆ ನವೀಕರಣದ ಪ್ರತಿಯನ್ನು ಕಡ್ಡಾಯಗೊಳಿಸದೆ ಎಲ್ಲಾ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಕ್ರಮ ವಹಿಸಬೇಕು ಹಾಗೂ ಮಕ್ಕಳ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯಗಳಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈಬಿಟ್ಟು ಬೇರೆ ಇಲಾಖೆಯ ಅಧಿಕಾರಿಗಳಿಂದ ಈ ಕಾರ್ಯವನ್ನು ಮಾಡಿಸಬೇಕೆಂದು ಕೋರಿ ಮನವಿ ಪತ್ರಗಳನ್ನು ನೀಡಿದರು.
ಈ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಇಬ್ಬರೂ ಹಿರಿಯ ಅಧಿಕಾರಿಗಳನ್ನು ವಿನಂತಿಸಿದ ಮಾಜಿ ಶಾಸಕರು; ತಮ್ಮ ಮನವಿಗೆ ಹಿರಿಯ ಅಧಿಕಾರಿಗಳಿಬ್ಬರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮತ್ತು ಸಂಬಂಧಪಟ್ಟವರಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.








