ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತರ ರಕ್ಷಣೆ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.