ಬೆಂಗಳೂರು: ರಾಜ್ಯದ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಓದಲಾದ ಸರ್ಕಾರಿ ಆದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ.
ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದು ಹೇಳಿದ್ದಾರೆ.
ಸರ್ಕಾರವು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಕೆಳಕಂಡ ಷರತ್ತುಗಳಿಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶಿಸಿದ್ದಾರೆ.
1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.
4.ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು









