ಬೆಂಗಳೂರು : ಖಾಸಗಿ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕು ಎಂಬ ಮಸೂದೆ ಜಾರಿಗೊಳಿಸಲು ಮುಂದಾಗಿದ್ದ ಕರ್ನಾಟಕ ಸರ್ಕಾರ, ಕಂಪೆನಿ ಮಾಲೀಕರ ಒತ್ತಡದಿಂದ ಹಿಂದೆ ಸರಿದಿದೆ. ಈಗ ಈ ಸಂಬಂಧ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರದ ಯೋಜನೆಯು ಸಂವಿಧಾನ ವಿರೋಧಿ ಎಂದು ಆರೋಪಿಸಲಾಗಿದೆ.
ನಗರದ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್ನ ಲೆಕ್ಕ ಪರಿಶೋಧಕಿ ಆರ್.ಅಮೃತಲಕ್ಷ್ಮಿ ಸಲ್ಲಿಸಿರುವ ಅರ್ಜಿ ಕುರಿತಂತೆ ವಕೀಲರು, ಇದೊಂದು ತುರ್ತು ವಿಚಾರ. ತಕ್ಷಣ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವನ್ನು ಒತ್ತಾಯಿಸಿದರು. ಇದಕ್ಕೆ ನ್ಯಾಯಪೀಠ, ಆಗಸ್ಟ್ 7ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.
ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಯು ಸಂವಿಧಾನದ 19 (1) (ಡಿ), 19 1 (ಇ), ಜಿ ಮತ್ತು 14ನೇ ವಿಧಿಗಳಿಗೆ ವಿರುದ್ಧವಾಗಿದೆ. ಈ ಮಸೂದೆ ಅನುಷ್ಠಾನಗೊಂಡಲ್ಲಿ ಸ್ವಾಭಾವಿಕ ನ್ಯಾಯತತ್ವಗಳ ಉಲ್ಲಂಘನೆಯಾಗುತ್ತದೆ. ಇಂಥ ಕಾಯ್ದೆಯನ್ನು ಜಾರಿಗೊಳಿಸುವ ಅಧಿಕಾರ ರಾಜ್ಯ ಶಾಸನ ಸಭೆಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಯು ಸಂವಿಧಾನದ 19 (1) (ಡಿ), 19 1 (ಇ), ಜಿ ಮತ್ತು 14ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಉದ್ದೇಶಿತ ಮಸೂದೆಯನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.