ನವದೆಹಲಿ: ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವಾಗ ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮುಂದೂಡಿದೆ.
ನ್ಯಾಯಪೀಠ ಸಭೆ ಸೇರದ ಕಾರಣ ನ್ಯಾಯಾಲಯವು ಇಂದು ಈ ವಿಷಯವನ್ನು ಕೈಗೆತ್ತಿಕೊಳ್ಳಲಿಲ್ಲ. ಕಳೆದ ವಾರ ಆನಂದ್ ಎಸ್ ಜೊಂದಾಲೆ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಪ್ರಧಾನಿಯನ್ನು ಆರು ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿದ್ದರು.
ಏಪ್ರಿಲ್ 9 ರಂದು ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿತಿನ್ ಪ್ರಸಾದ ಅವರನ್ನು ಬೆಂಬಲಿಸಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಕ್ಷಕ್ಕೆ ಮತಗಳನ್ನು ಕೇಳುವಾಗ ಹಿಂದೂ ಮತ್ತು ಸಿಖ್ ದೇವತೆಗಳನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಲಾಗಿದೆ.