ಮೈಸೂರು : 15 ಲಕ್ಷ ರೂ ಹಾಕುವುದಾಗಿ ಘೋಷಿಸಿದ್ದ ಪ್ರಧಾನಿ ಮೋದಿ 15 ಪೈಸೆಯೂ ಹಾಕಲಿಲ್ಲ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದ್ದಾರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ?
ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು.
ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು. ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಹೊಸ ಸುಳ್ಳು ಹಬ್ಬಿಸಿದರು. ಆದರೆ ನಾವು ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಟ್ಟೆವು. ಹೀಗಾಗಿ ಬಿಜೆಪಿಯ ಈ ಮಾತು ಕೂಡ ಸುಳ್ಳಾಯಿತು.
ಆಸ್ಪತ್ರೆ, ಕಾಲೇಜು, ಮಾರುಕಟ್ಟೆ, ರಸ್ತೆ, ನೀರು ಸೇರಿ ಮೈಸೂರಿನ ಎಲ್ಲಾ ಪ್ರಗತಿ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನ ನೀಡುತ್ತಲೇ ಬಂದಿದೆ. ಈ ಬಜೆಟ್ ನಲ್ಲೂ ಹಣ ಮೀಸಲಿಟ್ಟಿದ್ದೇವೆ ಎಂದು ಹೇಳಿದ್ದಾರೆ.