ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ನಿಧನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಅವರು ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡಿದ್ದಾರೆ.
ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ (ಬಿಎನ್ಪಿ) ನಾಯಕಿಯ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಢಾಕಾದಲ್ಲಿ ಮಾಜಿ ಪ್ರಧಾನಿ ಮತ್ತು ಬಿಎನ್ಪಿ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅವರ ಕುಟುಂಬಕ್ಕೆ ಮತ್ತು ಬಾಂಗ್ಲಾದೇಶದ ಎಲ್ಲ ಜನತೆಗೆ ನಮ್ಮ ಪ್ರಾಮಾಣಿಕ ಸಂತಾಪಗಳು. ಈ ದುರಂತ ನಷ್ಟವನ್ನು ಭರಿಸುವ ಧೈರ್ಯವನ್ನು ದೇವರು ಆಕೆಯ ಕುಟುಂಬಕ್ಕೆ ನೀಡಲಿ.” ಎಂದು ಹೇಳಿದ್ದಾರೆ.
ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಸಂಬಂಧಗಳನ್ನು ಬೆಳೆಸುವಲ್ಲಿ ಖಲೀದಾ ಜಿಯಾ ಅವರ ಪಾತ್ರವನ್ನು ಅವರು ಒಪ್ಪಿಕೊಂಡರು ಮತ್ತು ಅವರ “ಪ್ರಮುಖ ಕೊಡುಗೆಗಳು” ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದು ಹೇಳಿದರು.
ಭಾರತದ ಪ್ರಧಾನಿಯಾದ ಒಂದು ವರ್ಷದ ನಂತರ 2015 ರಲ್ಲಿ ಬಾಂಗ್ಲಾದೇಶದ ನಾಯಕಿಯನ್ನು ಭೇಟಿಯಾದದ್ದನ್ನು ಪ್ರಧಾನಿ ಮೋದಿ ನೆನಪಿಸಿಕೊಂಡರು. “ಅವರ ದೃಷ್ಟಿ ಮತ್ತು ಪರಂಪರೆಯು ನಮ್ಮ ಪಾಲುದಾರಿಕೆಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
80 ವರ್ಷದ ಖಲೀದಾ ಜಿಯಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ನಂತರ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ನಿಧನರಾದರು ಎಂದು ಅವರ ಪಕ್ಷ ಬಿಎನ್ಪಿ ಇಂದು ಹೇಳಿಕೆಯಲ್ಲಿ ತಿಳಿಸಿದೆ.








