ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 14ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಏಪ್ರಿಲ್ 26ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಏ.14ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5 ಗಂಟೆಗೆ ರಾಜಧಾನಿಗೆ ತೆರಳಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಶ್ವತ್ಥ ನಗರ ವೃತ್ತದಿಂದ ಜಕ್ಕೂರು ಏರೋಡ್ರೋಮ್ ವರೆಗೆ 12 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶೀಘ್ರದಲ್ಲೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಕುಮಾರ್ ಮಾಹಿತಿ ನೀಡಿದರು. ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನಿಂದ ಜಯಪ್ರಕಾಶ್ ಕಣದಲ್ಲಿದ್ದಾರೆ.