ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರದ ಪರವಾಗಿ ವಾದ ಮಂಡಿಸಲು ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಂದು ಹೈಕೋರ್ಟ್ ನಲ್ಲಿ ಪೋಕ್ಸೋ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರು ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆಯ ಸಂದರ್ಭದಲ್ಲಿ ಸಿಐಡಿ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದಂತಹ ಅಶೋಕ್ ನಾಯಕ್, ಸೆಪ್ಟೆಂಬರ್ 3ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹಾಗಾಗಿ ಪ್ರಕರಣದ ಮಾಹಿತಿಯನ್ನು ನೀಡಲಾಗುವುದು. ಹೀಗಾಗಿ, ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.
ಈ ವೇಳೆ ನ್ಯಾಯಾಧೀಶರು ಅಶೋಕ್ ನಾಯಕ್ ಅವರ ಕೋರಿಕೆಯನ್ನು ಪರಿಗಣಿಸಿ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ಮಾಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.