ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ನಮ್ಮ ಪೊಲೀಸರ ಮೇಲೆ ವಿಶ್ವಾಸವಿದೆ.ನಮ್ಮ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಾರೆ. ಹಾಗಾಗಿ ಪ್ರಕರಣವನ್ನು ಸಿಬಿಐ ವಹಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ರೇವಣ್ಣ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದ್ದು,ಈ ಪ್ರಕರಣವನ್ನು ಸಿಬಿಐ ವಹಿಸಬೇಕೆಂದು ಪ್ರತಿಪಕ್ಷಗಳು ಅಗ್ರಹಿಸುತ್ತಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಆದಂತಹ ಪ್ರಕರಣಗಳನ್ನು ಎಂದಾದರೂ ಬಿಜೆಪಿ ಸಿಬಿಐಗೆ ವಹಿಸಿತ್ತಾ? ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ.ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್‌ಐಟಿ ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದರು.

ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ? ಎಂದು ಪ್ರಶ್ನಿಸಿದರು.

ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು. ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದರು.

Share.
Exit mobile version