ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆ ಕರ್ನಾಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬೆನ್ನಲ್ಲೇ, ಇಂದು ದುಬೈನಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದೇ ಎಸ್ಐಟಿ ಅಧಿಕಾರಿಗಳಿಂದ ಬಂಧಿಸೋ ಸಾಧ್ಯತೆ ಇದೆ.
ನಿನ್ನೆಯಷ್ಟೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲವು ನಿರೀಕ್ಷಣಾ ಜಾಮೀನನ್ನು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮನೆಯಲ್ಲಿದ್ದಂತ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
ಲೈಂಗಿಕ ದೌರ್ಜನ್ಯ, ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೀಗಾಗಿ ಕುಟುಂಬದವರು ಜಾಮೀನು ಸಿಗೋದು ಇರಲಿ, ಬಿಡಲಿ, ಮೊದಲು ಎಸ್ಐಟಿ ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಕುಟುಂಬದವರ ಒತ್ತಾಯಕ್ಕೆ ಮಣಿದಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು, ದುಬೈನಿಂದ ಬೆಂಗಳೂರಿಗೆ ಇಂದು ಆಗಮಿಸುತ್ತಿರೋದಾಗಿ ತಿಳಿದು ಬಂದಿದೆ. ಕಳೆದ 10 ದಿನಗಳಿಂದ ದುಬೈನಲ್ಲಿ ಇದ್ದಂತ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆಯೋ ಸಾಧ್ಯತೆ ಇದೆ.