ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್) ಉಮಾ ಮಹದೇವನ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಹೇಳಿದರು.
ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದೂ ಸಚಿವರು ತಮ್ಮ ತಿಳಿಸಿದರು. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕೆಂದು ಸಚಿವರು ನಿರ್ದೇಶನ ನೀಡಿದರು.
ಮುಖ್ಯ ಮಂತ್ರಿಯವರು ಇ-ಸ್ವತ್ತು ವಿತರಣೆಗೆ ಸಂಬಂಧಿಸಿದಂತೆ ದಿನಾಂಕ: 06.01.2025ರಂದು ನೋಂದಣಿ ಮತ್ತು ಮುದ್ರಾಂಕ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನದ ರೂಪದಲ್ಲಿ ನಿಯಮಬದ್ಧವಾದ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ಮೂಲಕ ತೆರಿಗೆ ಸಂಗ್ರಹವನ್ನು ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು.
ಮುಖ್ಯ ಮಂತ್ರಿಯವರ ಸೂಚನೆಗಳನ್ನು ಅನುಷ್ಟಾನಗೊಳಿಸುವಂತೆ ಹಾಗೂ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಮತ್ತು ಆಸ್ತಿ ತೆರಿಗೆ ಸಂಗ್ರಹಣೆ ಅಭಿಯಾನ ನಡೆಸಲು ಎಲ್ಲಾ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಿಗೆ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ