ಮಂಡ್ಯ : ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಲ ದಿನಗಳಲ್ಲೇ ಮಂಜೂರಾತಿ ಸಿಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು.
ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ₹ 72 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರದಿಂದ ಹೊಸ ಶೈಕ್ಷಣಿಕ ನೀತಿ ರೂಪಿತವಾಗಿದೆ. ಕ್ಷೇತ್ರದ ಕೆಲವು ಕಡೆ ಸರ್ಕಾರಿ ಶಾಲೆಗಳಿಗೆ ಉತ್ತಮ ಕಟ್ಟಡಗಳಿವೆ, ಶಿಕ್ಷಕರಿದ್ದಾರೆ. ಆದರೆ ಮಕ್ಕಳ ಕೊರತೆ ಕಾಡುತ್ತಿದೆ. ಹೀಗಾಗಿ ಕ್ಷೇತ್ರದಲ್ಲಿ ಕೆಪಿಎಸ್ ಶಾಲೆಗಳನ್ನು ತೆರೆಯುವ ಮೂಲಕ ಖಾಸಗಿ ಶಾಲೆಗಳ ಕಡೆ ಮುಖ ಮಾಡಿರುವ ಪೋಷಕರು ತಮ್ಮ ಮಕ್ಕಳನ್ನು ಕೆಪಿಎಸ್ ಶಾಲೆಗಳಿಗೆ ದಾಖಲು ಮಾಡಬೇಕೆಂದರು.
ವಿದ್ಯಾರ್ಥಿಗಳು ಬೆಳಿಗ್ಗೆಯಿಂದ ಸಂಜೆವರೆಗೆ ಶಾಲೆಗೆ ಬಂದು ಪುಸ್ತಕ ನೋಡಿ ಹೋದರೆ ಸಾಲದು. ಶಾಲೆಯಲ್ಲಿ ಉತ್ತಮ ಸ್ನೇಹಮಯ ವಾತಾವರಣ ಬೆಳೆಸಬೇಕು. ಉನ್ನತ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಬೇಕು. ಸಮಾಜದ ಕಟ್ಟಕಡೆಯ ಮಕ್ಕಳಿಗೂ ವಿದ್ಯಾಭ್ಯಾಸ ದೊರೆಯಬೇಕು. ಹೀಗಾಗಿ ಕೆಪಿಎಸ್ ಶಾಲೆಗಳಲ್ಲಿ ಎಲ್.ಕೆ.ಜಿ ಯಿಂದ ದ್ವಿತೀಯ ಪಿಯುಸಿವರೆಗೂ ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮ ಭಾಷೆಗಳಲ್ಲಿ ಮಕ್ಕಳು ವ್ಯಾಸಂಗ ಮಾಡಬೇಕೆಂಬುದು ನಮ್ಮ ಸರ್ಕಾರದ ಚಿಂತನೆಯಾಗಿದೆ ಎಂದು ತಿಳಿಸಿದರು.
ಕೇವಲ ಎರಡು ವರ್ಷಗಳಲ್ಲಿ ಸರ್ಕಾರದಿಂದ 1 ಸಾವಿರ ಕೋಟಿ ಅನುದಾನ ತಂದು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಹೀಗಾಗಿ ಕೆಲ ದಿನಗಳಲ್ಲೇ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಶಿಲಾನ್ಯಾಸ ನೆರವೇರಿಸಿ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಹೇಳಿದರು.
ಇನ್ನು ಮನ್ ಮುಲ್ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ. ಆದರೆ, ಮದ್ದೂರು ಕ್ಷೇತ್ರಕ್ಕೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಒತ್ತಾಯಿಸಿದರು.
ಮದ್ದೂರು ಕ್ಷೇತ್ರದಲ್ಲಿ ಹೆಚ್ಚಿನ ಹೈನುಗಾರಿಕೆ ಹೊಂದಿದ್ದು, ಅಧ್ಯಕ್ಷ ಸ್ಥಾನ ನೀಡಿದರೇ ಮತ್ತಷ್ಟು ಅಭಿವೃದ್ಧಿಗೆ ಮುನ್ನುಡಿ ಬರೆಯಬಹುದು ಎಂದರು.
ಎರಡು ಮೂರು ಗೆದ್ದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೇಂಬುದು ಯಾವ ಮಾನದಂಡದಲ್ಲಿಯೂ ಇಲ್ಲ ಆದರೆ, ಅಧ್ಯಕ್ಷ ಸ್ಥಾನ ಯಾರಿಗೆ ಎಂಬುವುದನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಶಾಸಕರು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಮದ್ದೂರು ಪಟ್ಟಣ ವ್ಯಾಪ್ತಿಯ ಸಾರ್ವಜನಿಕರ ಒತ್ತಾಯದಂತೆ ಬಿಎಂಐಸಿ ಯೋಜನೆಯಿಂದ ಕೈ ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಹೀಗಾಗಿ ಸದನದಲ್ಲಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಚರ್ಚೆಗಳಾಗಿವೆ.
ಆದರೆ, ಮದ್ದೂರು ಪಟ್ಟಣವನ್ನು ಬಿಎಂಐಸಿ ವ್ಯಾಪ್ತಿಯಿಂದ ಕೈಬಿಡುವ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಬಿಎಂಐಸಿ ಯೋಜನೆಯ ಬಗ್ಗೆ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದ್ದು, ಈ ಸಮಸ್ಯೆಗೆ ಆದಷ್ಟು ಬೇಗ ಮುಕ್ತಿ ಸಿಗಲಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ