ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ಹಿಂದುಳಿದ ನಾಯಕ ಅಂತ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಲಾಗಿದೆ. ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತ, ನಾವು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಡೆದ ಹಗರಣವಲ್ಲ. ಬಿಜೆಪಿ ಸರ್ಕಾರವಿದ್ದಾಗಲೇ ಇದು ನಡೆದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.