ಬೆಂಗಳೂರು: ನಾಳೆ ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದಿಂದ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ( Puneeth Rajkumar ) 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿ ( Karnataka Ratna Award 2022 ) ಪ್ರದಾನ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸರ್ಕಾರದಿಂದ ಪುನೀತ್ ರಾಜ್ ಕುಮಾರ್ ಗೆ ಅಧಿಕೃತವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುತ್ತಿರೋದಾಗಿ ಆದೇಶಿಸಿದೆ.
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಜನಿಸಿ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಂಸ್ಕೃತಿಕ, ಚಲನಚಿತ್ರ, ಕೃಷಿ, ಜಾನಪದ, ವೈಜ್ಞಾನಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 1992ರಿಂದ ಕಾಲ ಕಾಲಕ್ಕೆ ಸರ್ಕಾರವು ನಿರ್ಧಿರಿಸುವ ಗಣ್ಯವ್ಯಕ್ತಿಗಳಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಾ ಬರಲಾಗುತ್ತಿದೆ ಎಂದಿದ್ದಾರೆ.
ಅದರಂತೆ ಕರ್ನಾಟಕ ರತ್ನ ಪ್ರಶಸ್ತಿಯ ಮಾರ್ಗಸೂಚಿಯಲ್ಲಿನ ಅಂಶಗಳಿಗೆ ವಿನಾಯ್ತಿ ನೀಡಿ, ಖ್ಯಾತ ಕನ್ನಡ ಚಲನ ಚಿತ್ರ ನಟರಾದ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಗೆ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಖ್ಯಾತ ಕನ್ನಡ ಚಲನಚಿತ್ರ ನಟರಾದಂತ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಗೆ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ, ಗೌರವಿಸಲಾಗಿದೆ ಎಂದು ತಿಳಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ