ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೊನ್ನೆಯಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಮಂಡ್ಯದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಪಕ್ಷದೊಂದಿಗೆ ವಿಲೀನವಾಗಲಿದೆ ಆಗಾಗಿ ಮೈತ್ರಿ ಅಭ್ಯರ್ಥಿಯನ್ನು ಜಿಲ್ಲೆಯ ಜನತೆ ತಿರಸ್ಕರಿಸಬೇಕೆಂದು ಕರೆ ನೀಡಿದ್ದರು.
ಈ ವಿಚಾರವಾಗಿ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪಾಪ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು, ಕೆಪಿಸಿಸಿ ಅಧ್ಯಕ್ಷರು ಅಂತಾನೇ ತಿಳಿದಿಲ್ಲ. ಇಂತಹ ವ್ಯಕ್ತಿಯನ್ನ ಈ ದೇಶದ ಪ್ರಧಾನಿ ಮಾಡಬೇಕೆಂದು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ. ಈಗ ನಡೆಯುತ್ತಿರುವ ಚುನಾವಣೆಯಲ್ಲಿ ದೇಶದ ಉದ್ದಗಲಕ್ಕೂ ವ್ಯಾಪಿಸಿರುವ ಅತೀ ದೊಡ್ಡ ಪಕ್ಷ ಕೇವಲ 281 ಅಭ್ಯರ್ಥಿಗಳನ್ನು ಕಣಕ್ಕಿಸಿದೆ ಇಂತಹ ವ್ಯಕ್ತಿಗಳು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಇನ್ನು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ, ಇದರಲ್ಲಿ ತಪ್ಪೇನಿದೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಯಾರು ಯಾರ ಪರವಾಗಿಬೇಕಾದ್ರು ಪ್ರಚಾರ ಮಾಡಬಹುದು. ಈಗಾಗಲೇ ಜಿಲ್ಲೆಯ ಜನತೆ ಯಾರಿಗೆ ಮತ ನೀಡಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಅನ್ನೋದನ್ನು ತೀರ್ಮಾನ ಮಾಡಿದ್ದಾರೆ ಎಂದರು.
ಇನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಕೆಲವೇ ದಿನಗಳಲ್ಲಿ ಚುನಾವಣೆ ಪ್ರಚಾರ ಮುಗಿಯುತ್ತಿದ್ದರು ಸಹ ಪ್ರಚಾರ ಕಾರ್ಯ ಆರಂಭಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಇತ್ತಿಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಸಹ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಅವರ ಪಕ್ಷ ಯಾವಾಗ ಸೂಚನೆ ನೀಡುತ್ತೋ ಆಗ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸಮಜಾಯಿಷಿ ನೀಡಿದರು.
ನಮ್ಮ ತಂದೆ ಎರಡು ಬಾರಿ ಮುಖ್ಯಮಂತ್ರಿಯಾಗುವ ಮೊದಲು ರಾಜ್ಯದ ರೈತರಿಗೆ ಕೊಟ್ಟಂತ ವಾಗ್ಧಾನವನ್ನು ಉಳಿಸಿಕೊಂಡಿದ್ದಾರೆ. ಅವರು ಚುನಾವಣೆಯಲ್ಲಿ ಎಲ್ಲೆ ಸ್ಪರ್ಧೆ ಮಾಡಿದರು ಜನತೆ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಈಗಾಗಲೇ ಜಿಲ್ಲೆಯ 8 ತಾಲೂಕಿನಲ್ಲಿ ಬಹಿರಂಗ ಸಭೆ ಆಯೋಜಿಸಿದ್ದು, ಬೃಹತ್ ಸಮಾವೇಶದಲ್ಲಿ ರಾಜ್ಯ ನಾಯಕರು ಸಹ ಭಾಗಿಯಾಗಿಲಿದ್ದಾರೆ. ನಾನು ಸಹ ಇಂದಿನಿಂದ ಎಲ್ಲಾ ಹೋಬಳಿ ಮಟ್ಟದಲ್ಲಿ ಪ್ರಚಾರ ಕೈಗೊಂಡಿದ್ದು, ಈ ಬಾರಿ ಕುಮಾರಸ್ವಾಮಿಯವರನ್ನು ಜಿಲ್ಲೆಯ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.
ವರದಿ: ಗಿರೀಶ್ ರಾಜ್, ಮಂಡ್ಯ
‘ಮಂಡ್ಯ’ದಲ್ಲಿ ವರುಣನ ಆರ್ಭಟ: ಬಿರು ಬಿಸಿಲಿನಿಂದ ಕಂಗೆಟ್ಟ ಜನತೆಗೆ ತಂಪೆರೆದ ‘ಮಳೆರಾಯ’
ಇರಾನ್ ವಶದಲ್ಲಿದ್ದ ಭಾರತೀಯ ಸಿಬ್ಬಂದಿಯಾಗಿದ್ದ ಕೇರಳದ ಮಹಿಳೆ ಸ್ವದೇಶಕ್ಕೆ ವಾಪಸ್