ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬಾಗಲಕೋಟೆ, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಗಾಳಿಯ ಜೊತೆಗೆ ಆಲಿಕಲ್ಲು ಮಳೆ (Hailstorm) ಬೀಳುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರು ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಇದರೊಂದಿಗೆ ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ‘ರಣ ಮಳೆ’
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ರಣ ಮಳೆ ಸುರಿಯಲಿದೆ. ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು: ಮೇ 25ರಂದು ಗಂಟೆಗೆ 50-60 ಕಿ.ಮೀ ವೇಗದ ಬಲವಾದ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಮೇ 26ರಿಂದ 28ರ ವರೆಗೆ ಗಾಳಿಯ ವೇಗ ಇದೇ ರೀತಿ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಣನೀಯವಾಗಿ ಕುಸಿಯಲಿದೆ.
ದಕ್ಷಿಣ ಒಳನಾಡು: ಮೇ 25ರಂದು ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಮಳೆಯಾಗಲಿದ್ದು, ಮೇ 26ರಿಂದ 28ರ ವರೆಗೂ ಇದೇ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಇಡೀ ರಾಜ್ಯದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ.
ಕರಾವಳಿ: ಮುಂದಿನ 5 ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಮೇ 25 ರಂದು ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮೇ 26 ರಿಂದ 28 ರವರೆಗೆ ಮಿಂಚಿನೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಗಮನಿಸಿ: ಬಿರುಗಾಳಿ ಮತ್ತು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಮರ ಮತ್ತು ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಕೋರಿದೆ.








