ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ ಹಾಗೂ ಒಡಿಶಾಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಅ.27ಕ್ಕೆ ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ವಿಜಯನಗರ, ತುಮಕೂರು ಜಿಲ್ಲೆಯಲ್ಲೂ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.








