ಬೆಂಗಳೂರು: ರಾಜ್ಯದಲ್ಲಿ ಬಿಸಿ ಗಾಳಿಯ ವಾತಾವರಣದ ನಡುವೆಯೇ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮೇ 1ರಿಂದ ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.








