ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿಯೂ ಬೀಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿವಿಧ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲ ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕಾರಣದಿಂದ ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಇದೇ ವೇಳೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಮಳೆಯೊಂದಿಗೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.








