ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 22 ರಿಂದ 26 ರವರೆಗೆ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ.
ಇಂದು (ಏಪ್ರಿಲ್ 22) ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ.
ನಾಳೆ ಬೆಳಗಾವಿ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಂದೆಡೆ ಮಳೆಯ ಮುನ್ಸೂಚನೆ ಇದ್ದರೂ, ಮತ್ತೊಂದೆಡೆ ರಾಜ್ಯದಲ್ಲಿ ಬಿಸಿಲಿನ ಬೇಗೆ ಮುಂದುವರಿದಿದೆ. ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿದೆ.








