ಬೆಂಗಳೂರು: ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕನ್ನಡಿಗರಿಗೆ ವರುಣ ದೇವ ತಂಪೆರೆದಿದ್ದಾನೆ. ಏಪ್ರಿಲ್ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆಯ ಉಷ್ಣಾಂಶಕ್ಕೆ ಸಾಕ್ಷಿಯಾಗಿದ್ದ ರಾಜ್ಯದಲ್ಲಿ ಈಗ ವಾತಾವರಣ ಸಂಪೂರ್ಣ ಬದಲಾಗಿದ್ದು, ಪೂರ್ವ ಮುಂಗಾರು ಚುರುಕುಗೊಂಡಿದೆ.
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು (ಮೇ 8) ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಎಲ್ಲೆಲ್ಲಿ ಮಳೆಯ ಅಬ್ಬರ?
ಹವಾಮಾನ ವರದಿಯ ಪ್ರಕಾರ, ಇಂದು ಪ್ರಮುಖವಾಗಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ರಾಯನ ಅಬ್ಬರ ಜೋರಿರಲಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ವೇಳೆಗೆ ಮಳೆ ಸುರಿಯುತ್ತಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇಂದು ಕೂಡ ನಗರದ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








