ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗುತ್ತಲೇ ಇದ್ದರೂ, ಮುಂದಿನ ದಿನಗಳಲ್ಲಿ ಹಲವಾರು ಜಿಲ್ಲೆಗಳಲ್ಲಿ ಚದುರಿದ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ, ರಾಜ್ಯದ ಕೆಲವು ಭಾಗಗಳಲ್ಲಿ ಈಗಾಗಲೇ ಲಘು ಮಳೆಯಾಗಿದ್ದರೂ, ಮುಂದಿನ ವಾರ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಸೇರಿದಂತೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮೇ 12 ರ ನಾಳೆ ಕರಾವಳಿ ಕರ್ನಾಟಕದ ಭಾಗಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.