ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಮೇ 5) ಮೇ 10ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಸಂದರ್ಭದಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಮೇ 6 ಮತ್ತು 7ರಂದು ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮೇ 10ರವರೆಗೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.








