ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 18 ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ರಾಜ್ಯಾದ್ಯಂತ ಒಣ ಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯಲಿದೆಯಾದರೂ, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಮಳೆಯ ಮುನ್ಸೂಚನೆ: ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನಾಳೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗೂ ಏಪ್ರಿಲ್ 6ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶನಿವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು: ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








