ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಮಳೆಯಿಂದಾಗಿ ರೈತರು ಕೃಷಿ ಚಟುವಟಿಕೆ, ಬೀಜ ಭಿತ್ತನೆಗೂ ಅಡ್ಡಿಯಾಗಿದೆ. ಇದರ ನಡುವೆ ಇನ್ನೂ 3-4 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆಗಸ್ಟ್ 2ರವರೆಗೆ ಕರ್ನಾಟಕದಲ್ಲಿ ವರುಣ ಆರ್ಭಟಿಸಲಿದ್ದಾನೆ. ಮುಂದಿನ ಎರಡು ದಿನ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಆರೇಂಜ್ ಅಲರ್ಟ್ ನೀಡಲಾಗಿದೆ ಎಂದಿದೆ.
ಕರಾವಳಿ ಜಿಲ್ಲೆಗಳಾದಂತ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜುಲೈ.30ರಂದು ಆರೆಂಜ್ ಅಲರ್ಟ್ ನೀಡಿದ್ದರೇ, ಜುಲೈ.31ರಿಂದ ಆಗಸ್ಟ್ 2ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ.31ರವರೆಗೆ ಮಲೆನಾಡಿನಲ್ಲೂ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 30 ರ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.