ಬೆಂಗಳೂರು : ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದ್ದು, ಭಾನುವಾರ ಕೊಡಗು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ 2 ದಿನ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ ಎರಡು ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆಯಲಿದೆ, ಕಳೆದ ಎರಡು ದಿನ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಸೋಮವಾರ ಹಾಗೂ ಮಂಗಳವಾರ ಸಹ ಮಳೆಯ ಅಬ್ಬರ ಮುಂದುವರೆಯಲಿದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಳಿದಂತೆ ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಗದಗ ಹಾಗೂ ಬೀದರ್, ಕರಾವಳಿಯ ದಕ್ಷಿಣ ಕನ್ನಡದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆ ಕುರುಬರಹಳ್ಳಿಯಲ್ಲಿ ಶುಂಠಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು ನಾಗಮ್ಮ (65) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಭಾನುವಾರ ಮಧ್ಯಾಹ್ನ 1.30ಕ್ಕೆ ಆರಂಭವಾದ ಆಲಿಕಲ್ಲು ಸಹಿತ ಮಳೆ ಸಂಜೆವರೆಗೂ ಸುರಿಯಿತು. ಈ ವೇಳೆ, ಕುರುಬರಹಳ್ಳಿಯಲ್ಲಿ ಮಳೆಯಲ್ಲೇಶುಂಠಿ ನಾಟಿ ಮಾಡುತ್ತಿದ್ದ ನಾಗಮ್ಮ ಎಂಬುವರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.