ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಧಾರವಾಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಹುಬ್ಬಳ್ಳಿ-ಧಾರವಾಡ, ಕಾರವಾರ, ಗದಗ, ಯಾದಗಿರಿ, ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮಳೆಗೆ ಅಕ್ಷರಶಃ ನಲುಗಿ ಹೋಗಿವೆ. ಬುಧವಾರ ರಾತ್ರಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಇಬ್ಬರು ನೀರು ಪಾಲಾಗಿದ್ದರೆ, ಗೋಕಾಕ್ನಲ್ಲಿ ಒಬ್ಬರು ಬಲಿಯಾಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜೂ.13 ರಂದು ಸಹ ಮುಂದುವರೆಸಿ, ಇಂದು ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಸೂಚಿಸಲಾಗಿತ್ತು. ಮಳೆಯೂ ನಿರಂತರವಾಗಿ ಆಗುತ್ತಿರುವದರಿಂದ ಅನೇಕ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಠಿಯಿಂದ ನಾಳೆಯೂ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಘೋಷಿಸಿ ಆದೇಶಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರವರೆಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಢಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.
ಉಡುಪಿ
ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.