ಬೆಂಗಳೂರು : ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು ಭಾನುವಾರ ಉಡುಪಿ, ಉತ್ತರ ಕನ್ನಡ ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಪರಿಣಾಮ ಅಕ್ಟೋಬರ್ 23ರ ವರೆಗೆ ದಕ್ಷಿಣ ಒಳನಾಡಿನಲ್ಲಿ, ಕರಾವಳಿ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ಕರಾವಳಿ ಭಾಗದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.