ಬೆಂಗಳೂರು : ಭಾರೀ ಚಳಿ, ಮಳೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣ ಅಬ್ಬರಿಸಲಿದ್ದಾನೆ. ಮಳೆ ದಕ್ಷಿಣ ಒಳನಾಡನ್ನು ಕಾಡಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದೆ. ಈ ನಡುವೆಯೇ ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ಬೆಂಗಳೂರಿನಲ್ಲಿ ಮತ್ತಷ್ಟು ಚಳಿ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಹಾಗೂ ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯಿದೆ. ಕೊನೆಯ 2 ದಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.