ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ಇನ್ನು ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಮುಂಗಾರು ಅಬ್ಬರ ಜೋರಾಗಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಬೆಳಗಾವಿ, ಉತ್ತರ ಕನ್ನಡ, ದಕ್ಷಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಡ್ಯ, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹೆಚ್ಚು ಮಳೆ ಸುರಿಯುತ್ತಿರುವ ಕಾರಣ ಕುಶಾಲನಗರ ಹೊರತುಪಡಿಸಿ, ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಅಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ವಿಜಯನಗರ, ಬೀದರ್ ನಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.