ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನದ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹಿರಿಯ ನಾಯಕನ ಮನವೊಲಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದು, ಈ ಕುರಿತು ಸುರ್ಜೇವಾಲ ಅವರೇ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ.
ತಾಜ್ ವೆಸ್ಟೆಂಡ್ನಲ್ಲಿ ನಡೆದ ಹೈವೋಲ್ಟೇಜ್ ಸಭೆ
ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ಹಾಗೂ ಸಚಿವ ಕೃಷ್ಣ ಭೈರೇಗೌಡ ಅವರ ನಡುವೆ ಮಹತ್ವದ ಸಭೆ ನಡೆಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಮಾಲೋಚನೆಯಲ್ಲಿ ಸಚಿವರ ಅಸಮಾಧಾನಕ್ಕೆ ಕಾರಣವಾದ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ಬಳಿಕ ಜಂಟಿಯಾಗಿ ಮಾಧ್ಯಮದವರ ಮುಂದೆ ಬಂದ ನಾಯಕರು ಗೊಂದಲಗಳಿಗೆ ತೆರೆ ಎಳೆದರು.
ರಾಮಲಿಂಗಾರೆಡ್ಡಿ ಕಾಂಗ್ರೆಸ್ ಆಸ್ತಿ: ಸುರ್ಜೇವಾಲ ಶ್ಲಾಘನೆ
ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, “ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ” ಎಂದು ಪ್ರಕಟಿಸಿದರು.
“ರಾಮಲಿಂಗಾರೆಡ್ಡಿ ಅವರು ಪಕ್ಷದ ಅತ್ಯಂತ ಹಿರಿಯ ನಾಯಕರು. ಹಲವು ಬಾರಿ ಸಚಿವರಾಗಿ ಯಶಸ್ವಿಯಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರೊಂದಿಗೆ ಅವರು ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ರಾಜೀನಾಮೆ ನೀಡಿದ ಬಳಿಕ ಉಂಟಾಗಿದ್ದ ಸಣ್ಣಪುಟ್ಟ ತಪ್ಪು ತಿಳುವಳಿಕೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗಿದೆ. ಈಗ ಎಲ್ಲವೂ ಸುಸೂತ್ರವಾಗಿದೆ,” ಎಂದು ಸುರ್ಜೇವಾಲ ತಿಳಿಸಿದರು.
ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸುತ್ತಿದ್ದಂತೆ, ಕಾಂಗ್ರೆಸ್ ಪಾಳಯದಲ್ಲಿ ಮನೆಮಾಡಿದ್ದ ಆತಂಕ ದೂರಾಗಿದ್ದು, ಕೈ ನಾಯಕರು ನಿಟ್ಟುಸಿರು ಬಿಡುವಂತಾಗಿದೆ.








