ಬೆಂಗಳೂರು: ನಗರದ ಕುಂದಲಹಳ್ಳಿ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆಯಲ್ಲಿ ಅಧಿಕಾರಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ.
ಹಲವಾರು ಜನರು ಗಾಯಗೊಂಡು ಸ್ಫೋಟಕ್ಕೆ ಕಾರಣವಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗುರುತಿಸಲಾಗಿದೆ.
ಯುಎಪಿಎ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲು
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ನಗರದ ಜನಪ್ರಿಯ ಉಪಾಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಧ್ಯಾಹ್ನ 12.50 ರಿಂದ 1 ಗಂಟೆಯ ನಡುವೆ ಬಾಂಬ್ ಸ್ಫೋಟಗೊಂಡಿದ್ದು, ಹೋಟೆಲ್ ಸಿಬ್ಬಂದಿ ಮತ್ತು ಗ್ರಾಹಕರು ಸೇರಿದಂತೆ ಒಟ್ಟು 10 ಜನರು ಗಾಯಗೊಂಡಿದ್ದಾರೆ. ಆದಾಗ್ಯೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದೆ.
ಈ ಸಂಬಂಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967 ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಿಧಿವಿಜ್ಞಾನ ತಜ್ಞರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.